ಮಡಿಕೇರಿ, ಜೂನ್ 04: ಜಿಲ್ಲಾಡಳಿತ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವತಿಯಿಂದ ಪುನರ್ವಸತಿ ಯೋಜನೆ ಅಡಿ ಜಂಬೂರಿನಲ್ಲಿ ಸಂತ್ರಸ್ತರಿಗೆ ನಿರ್ಮಿಸಿರುವ 383 ಮನೆಗಳನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಮತ್ತು ಕಂದಾಯ ಸಚಿವರಾದ ಆರ್.ಅಶೋಕ್ ಅವರು ಮನೆ ಹಕ್ಕು ಪತ್ರ ಹಾಗೂ ಕೀ ನೀಡುವ ಮೂಲಕ ಗುರುವಾರ ಹಸ್ತಾಂತರಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಯನ್ನು ಸಂತ್ರಸ್ತರಿಗೆ ಹಸ್ತಾಂತರ ಮಾಡಬೇಕಿತ್ತು. ಆದರೆ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಮತ್ತು ಕಂದಾಯ ಸಚಿವರಾದ ಆರ್.ಅಶೋಕ್ ಉಪಸ್ಥಿತಿಯಲ್ಲಿ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಬಡಾವಣೆಯಲ್ಲಿ ಸಂತ್ರಸ್ತರಿಗೆ ಮನೆ ಹಸ್ತಾಂತರ ಮಾಡಲಾಯಿತು.
ಜಿಲ್ಲೆಯಲ್ಲಿ 2018ರ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಹಲವು ಕುಟುಂಬಗಳು ಮನೆ ಕಳೆದುಕೊಂಡಿದ್ದರು. ಈ ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಸ್ಥಳ ಗುರುತಿಸಿ ಪ್ರತಿ ಮನೆಗೆ 9.85 ಲಕ್ಷ ರೂ. ವೆಚ್ಚದಲ್ಲಿ ಎರಡು ಬೆಡ್ರೂಮ್ ಒಳಗೊಂಡ ಸುಸಜ್ಜಿತ ಮನೆಗಳನ್ನು ನಿರ್ಮಿಸಲಾಗಿತ್ತು.