ಬೆಂಗಳೂರು, ಮೇ 20: ಕೋವಿಡ್-19 ರೋಗ ತಡೆಗಟ್ಟಲು ಘೋಷಿಸಿದ್ದ ಲಾಕ್ ಡೌನ್ ಕಾರಣಕ್ಕೆ ವಲಸಿಗ ಕಾರ್ಮಿಕರು ಬಹಳ ಸಂಖ್ಯೆಯಲ್ಲಿ ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದು, ಅವರಿಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
2020-21ನೇ ಸಾಲಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ 13 ಕೋಟಿ ಮಾನವ ದಿನಗಳ ಸೃಜನೆಯ ಗುರಿ ಹಾಗೂ 6315.79 ಕೋಟಿ ರೂಪಾಯಿ ಅನುದಾನ ನಿಗದಿ ಪಡಿಸಲಾಗಿದೆ. ಇದಲ್ಲದೆ ಕೇಂದ್ರ ಸರ್ಕಾರವೂ ಉದ್ಯೋಗ ಖಾತರಿ ಯೋಜನೆಗೆ 40 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನಿಗದಿ ಪಡಿಸಿರುವ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರಿಗೆ ಉದ್ಯೋಗ ದೊರೆಯುವಂತೆ ಹಾಗೂ ನಿಗದಿತ ಅವಧಿಯಲ್ಲಿ ವೇತನ ಪಾವತಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.