ಬೆಂಗಳೂರು : ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗ, ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗಲಿದೆ. ಅ.10ರಿಂದ ಅ.14ರವರೆಗೆ ಉತ್ತರ ಕನ್ನಡ, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ಹುಬ್ಬಳ್ಳಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಹೆಚ್ಚು ಮಳೆಯಾಗಲಿದೆ.
ಉಳಿದಂತೆ ದಕ್ಷಿಣ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ, ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.