ನವದೆಹಲಿ, ಜೂನ್.14: ಭಾರತದಲ್ಲಿ ಮುಂದಿನ ಆರು ದಿನಗಳಲ್ಲಿ ನೊವೆಲ್ ಕೊರೊನಾ ವೈರಸ್ ಸೋಂಕಿತರ ತಪಾಸಣೆ ಸಂಖ್ಯೆಯು ಮೂರು ಪಟ್ಟು ಹೆಚ್ಚಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೊವಿಡ್-19 ಪರಿಶೀಲನಾ ಸಭೆಯನ್ನು ನಡೆಸಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಹರ್ಷವರ್ಧನ್, ನವದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಜರಿದ್ದರು.
ನವದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದ್ದು, ಇನ್ನೆರೆಡು ದಿನಗಳಲ್ಲಿ ಸೋಂಕು ತಪಾಸಣೆಯ ಸಂಖ್ಯೆಯನ್ನು ಇಮ್ಮಡಿಗೊಳಿಸಲಾಗುತ್ತದೆ. ಅಂದರೆ ಈ ಮೊದಲು ದಿನಕ್ಕೆ 100 ಜನರನ್ನು ಕೊರೊನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸುತ್ತಿದ್ದರೆ, ಇನ್ನುಮುಂದೆ ದಿನಕ್ಕೆ 100ರ ಬದಲು 200 ಜನರನ್ನು ತಪಾಸಣೆಗೆ ಒಳಪಡಿಸಲಾಗುತ್ತದೆ.