ಬೆಂಗಳೂರು, ಜೂನ್ 3: ಬೆಳಗಾವಿ, ಮಂಗಳೂರಿನಲ್ಲಿ ಚಿಪ್ ಉತ್ಪಾದನಾ ಘಟಕ ಸ್ಥಾಪಿಸುವುದಾದರೆ ಸರ್ಕಾರದಿಂದ ಎಲ್ಲ ಅಗತ್ಯ ಸಹಕಾರ ನೀಡಲು ಸಿದ್ಧ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ, ಇಂಟೆಲ್ ಸಂಸ್ಥೆಗೆ ಭರವಸೆ ನೀಡಿದ್ದಾರೆ. ಇದೇ ವೇಳೆ ಇಂಟೆಲ್ ಇಂಡಿಯಾ ಬಿಸಿನೆಸ್ ಆಪರೇಷನ್ನ ನಿರ್ದೇಶಕ ಮಾನಸ್ ದಾಸ್ ಒಂದು ಕೋಟಿ ರೂ. ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು.
“ಕೊವಿಡ್ 19 ಪರಿಸ್ಥಿತಿ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಇಂಟೆಲ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ರೂ. ದೇಣಿಗೆ ನೀಡಿರುವುದು ಸಂತಸದ ವಿಷಯ. ಸರ್ಕಾರದ ಪರವಾಗಿ ಅವರಿಗೆ ಧನ್ಯವಾದ ತಿಳಿಸಿದ್ದೇನೆ ಎಂದು ಡಾ. ಅಶ್ವಥ್ ಹೇಳಿದರು.
ಇಂಟೆಲ್ ಭಾರತದ ಮುಖ್ಯಸ್ಥೆ ನಿವೃತ್ತಿ ರಾಯ್ ಹಾಗೂ ಸಂಸ್ಥೆಯ ಅಧಿಕಾರಿಗಳೊಂದಿಗೆ ಡಾ. ಅಶ್ವತ್ಥನಾರಾಯಣ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.
“ಮಂಗಳೂರಿನಲ್ಲೇ ಬಂದರು ಇದೆ, ಬೆಳಗಾವಿಗೆ ಗೋವಾ ಬಂದರು ಸಮೀಪದಲ್ಲಿದೆ. ಈ ಎರಡೂ ಕಡೆಗಳಲ್ಲಿ ಉತ್ಪಾದನಾ ಘಟಕ ಸ್ಥಾಪನೆಗೆ ಅಗತ್ಯ ಸ್ಥಳಾವಕಾಶವೂ ಇದೆ. ಇಂಟೆಲ್ ಸಂಸ್ಥೆ ಈ ಅವಕಾಶವನ್ನು ಬಳಸಿಕೊಳ್ಳುವುದಾದರೆ, ಸರ್ಕಾರದ ಕಡೆಯಿಂದ ಎಲ್ಲ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಭರವಸೆ ನೀಡಲಾಯಿತು,”ಎಂದು ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು.