ಹೈದರಾಬಾದ್: ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿದ್ದ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ತಮ್ಮ ಸಹೋದ್ಯೋಗಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸೈಬರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
21 ವರ್ಷದ ನೃತ್ಯಗಾರ್ತಿ ನೀಡಿದ ದೂರಿನ ಮೇಲೆ ಮೊದಲಿಗೆ ರಾಯ್ ದುರ್ಗಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತಾದರೂ, ಠಾಣಾ ವ್ಯಾಪ್ತಿಯ ಹಿನ್ನೆಲೆಯಲ್ಲಿ ಸದ್ಯ ಪ್ರಕರಣವನ್ನು ನರಸಿಂಗಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ದೂರುದಾರೆ ನೃತ್ಯಗಾರ್ತಿಯು ಜಾನಿ ಮಾಸ್ಟರ್ ಅವರೊಂದಿಗೆ ಕಳೆದ ಕೆಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಳು ಹಾಗೂ ದೇಶದ ವಿವಿಧ ಭಾಗಗಳಿಗೆ ಅವರೊಂದಿಗೆ ಚಿತ್ರೀಕರಣಕ್ಕೆ ತೆರಳಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಡುವೆ, ಸದರಿ ನೃತ್ಯಗಾರ್ತಿಯ ಮೇಲೆ ಅತ್ಯಾಚಾರವೆಸಗಿರುವ ಜಾನಿ ಮಾಸ್ಟರ್, ಈ ಕುರಿತು ಯಾರ ಬಳಿಯೂ ಹೇಳದಂತೆ ಬೆದರಿಕೆ ಒಡ್ಡಿದ್ದರು ಎಂದು ಆರೋಪಿಸಲಾಗಿದೆ.
ದೂರನ್ನು ಆಧರಿಸಿ, ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ನರಸಿಂಗಿ ಠಾಣೆಯ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.