ಹೊಸದಿಲ್ಲಿ : ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಮಲಯಾಳಂ ನಟ ಮೋಹನ್ ಲಾಲ್ ಅವರ ಹೆಸರನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಘೋಷಿಸಿದೆ.
ಈ ಕುರಿತು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಮೋಹನ್ ಲಾಲ್ ಅವರ ಸಿನಿಮೀಯ ಪ್ರಯಾಣವು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತದೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ” ಎಂದು ತಿಳಿಸಿದೆ.
ಸೆಪ್ಟೆಂಬರ್ 23ರಂದು ನಡೆಯಲಿರುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ನಡೆಯಲಿದೆ.
ಭಾರತೀಯ ಸಿನಿಮಾದ ಪಿತಾಮಹ ಎಂದು ಕರೆಯಲ್ಪಡುವ ದಾದಾಸಾಹೇಬ್ ಫಾಲ್ಕೆ ಅವರ ಸ್ಮರಣಾರ್ಥ 1969 ರಿಂದ ಭಾರತ ಸರಕಾರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡುತ್ತಿದೆ. ಮಲಯಾಳಿ ನಿರ್ದೇಶಕ ಅಡೂರ್ ಗೋಪಾಲಕೃಷ್ಣನ್ 2004ರಲ್ಲಿ ಈ ಪ್ರಶಸ್ತಿಯನ್ನು ಪಡೆದಿದ್ದರು.