ವಿಜಯಪುರ: ರಾಜ್ಯ ಸರ್ಕಾರ, ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ತಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ವಿರುದ್ಧ ಆರೋಪ ಮಾಡಿದ್ದನ್ನು ಮರೆಯಬಾರದು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ.
ಮಂಗಳವಾರ ನಗರದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ”ಯಡಿಯೂರಪ್ಪ ಅವರ ಮಗ 10 ಸಾವಿರ ಕೋಟಿ ಲೂಟಿ ಮಾಡಿದ್ದಾರೆ ಎಂದು ಈ ಹಿಂದೆಯೇ ಮಾತನಾಡಿದ್ದರು” ಎಂದು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧದ ಯತ್ನಾಳ್ ಆರೋಪಗಳಿಗೆ ಪ್ರತಿಕ್ರಿಯಿಸಿದರು.
ʼʼಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ, ಅವರ ಮಗ ಬಿ.ವೈ.ವಿಜಯೇಂದ್ರ ಮಾಡುತ್ತಿರುವ ಭ್ರಷ್ಟಾಚಾರ ಮಿತಿ ಮೀರಿದೆ. ಮಾರಿಶಸ್ ಪ್ರವಾಸಕ್ಕೆ ಪದೇ ಪದೇ ಹೋಗುತ್ತಿರುವುದೇ ಅದಕ್ಕಾಗಿ ಎಂದು ಇದೇ ಯತ್ನಾಳ ಗಂಭೀರ ಆರೋಪ ಮಾಡಿದ ವಿಡಿಯೋಗಳನ್ನು ರಾಜ್ಯದ ಜನರು ನೋಡಿದ್ದಾರೆʼʼ ಎಂದು ಹೇಳಿದರು.