ಚಿಕ್ಕಮಗಳೂರು, ಸೆ.23: ಶಾರ್ಟ್ ಸರ್ಕ್ಯೂಟ್‍ನಿಂದಾಗಿ ರಸ್ತೆ ಮಧ್ಯೆ ಕಾರೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಬೆಂಕಿಯಿಂದ ಭಸ್ಮವಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಕುದುರೆಗುಂಡಿ ಗ್ರಾಮದಲ್ಲಿ ನಡೆದಿದ್ದು, ಕಾರಿನಲ್ಲಿದ್ದ ಚಾಲಕ ಸೇರಿದಂತೆ ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶುಕ್ರವಾರ ಸಂಜೆ ಕೊಪ್ಪ ಪಟ್ಟಣದಿಂದ ಕುದುರೆಗುಂಡಿಗೆ ಬರುತ್ತಿದ್ದ ಮಾರುತಿ 800 ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಚಲಿಸುತ್ತಿರುವ ಸಂದರ್ಭದಲ್ಲೇ ನಡು ರಸ್ತೆಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ಚಾಲಕ ಸೇರಿದಂತೆ ಮೂವರು ಕೂಡಲೇ ಕಾರು ನಿಲ್ಲಿಸಿ ಕೆಳಗಿಳಿದಿದ್ದರಿಂದ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.
ನಂತರ ಇಡೀ ಕಾರಿಗೆ ಬೆಂಕಿ ಆವರಿಸಿಕೊಂಡಿದ್ದು, ಕೆಲವೇ ಹೊತ್ತಿನಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳೀಯ ಗ್ರಾಮಸ್ಥರು ನೀರು ಎರಚಿ ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಪ್ರಯೋಜನವಾಗಿಲ್ಲ. ಘಟನೆಯಿಂದಾಗಿ ಸುಮಾರು 1 ಗಂಟೆಗಳ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.