EBM News Kannada
Leading News Portal in Kannada

ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ: ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್ ಮನೆ-ಕಚೇರಿ‌ ಮೇಲೆ ಈಡಿ ದಾಳಿ

0


ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ನಿವಾಸಗಳಿಗೆ ಈಡಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ ತನಿಖೆಯನ್ನು ಚುರುಕುಗೊಳಿಸಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಭದ್ರತೆಯೊಂದಿಗೆ ಕಾರ್ಯಾಚರಣೆ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಇನ್ನೂ ಕೆಲವೆಡೆ ಶೋಧ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ‌ನ ಅವ್ಯವಹಾರದ ಹಿನ್ನೆಲೆಯಲ್ಲಿ ನಾಗೇಂದ್ರ ಇತ್ತೀಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಕ್ರಮಕ್ಕೆ ಸಂಬಂಧಿಸಿ ಯೂನಿಯನ್ ಬ್ಯಾಂಕ್ ಕೂಡ ಜಾರಿ ನಿರ್ದೇಶನಾಯಕ್ಕೆ ದೂರು ನೀಡಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಈಡಿ) ಅಧಿಕಾರಿಗಳು, ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಯ ಮಾಜಿ ಸಚಿವರೂ ಆಗಿರುವ ನಾಗೇಂದ್ರ ಅವರ ಸದಾಶಿವನಗರದ ಫ್ಲ್ಯಾಟ್, ಯಲಹಂಕದಲ್ಲಿರುವ ಬಸನಗೌಡ ದದ್ದಲ್ ಮನೆ ಹಾಗೂ ವಸಂತನಗರದಲ್ಲಿರುವ ವಾಲ್ಮೀಕಿ ನಿಗಮದ ಕಚೇರಿಗಳಲ್ಲಿ ಶೋಧ ನಡೆಸುತ್ತಿದ್ದಾರೆ.

ನಾಗೇಂದ್ರ ಆಪ್ತ ಸಹಾಯಕರು ಈಡಿ ವಶಕ್ಕೆ :

ನಾಗೇಂದ್ರ ಅವರ ಆಪ್ತ ಸಹಾಯಕರಾಗಿದ್ದ ವಿಜಯಕುಮಾರ್ ಮತ್ತು ಚೇತನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ವಾಲ್ಮೀಕಿ‌ ಅಭಿವೃದ್ಧಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಬಿ. ಪದ್ಮನಾಭ ಮತ್ತು ಹಿಂದಿನ ಲೆಕ್ಕಾಧಿಕಾರಿ ಪರಶುರಾಮ ದುರ್ಗಣ್ಣನವರ ಅವರ ಮನೆಗಳ ಮೇಲೂ ಈಡಿ ದಾಳಿ ನಡೆಸಿದ್ದು, ಸದ್ಯ ಈ ಇಬ್ಬರೂ ಎಸ್ಐಟಿ ಕಸ್ಟಡಿಯಲ್ಲಿದ್ದಾರೆ.

ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣ ಕುರಿತು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್ಐಟಿ) ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ.

Leave A Reply

Your email address will not be published.