ಬೆಂಗಳೂರು : ತುಂಗಭದ್ರಾ ಅಣೆಕಟ್ಟು ಮತ್ತೆ ತುಂಬುತ್ತಿರುವುದು ಸಂತಸದ ವಿಚಾರ. 105.79 ಸಾಮರ್ಥ್ಯದ ಅಣೆಕಟ್ಟಿನಲ್ಲಿ ಪ್ರಸ್ತುತ ಸುಮಾರು 98 ಟಿಎಂಸಿ ನೀರು ಸಂಗ್ರಹಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತುಂಗಭದ್ರಾ ಕ್ರಸ್ಟ್ ಗೇಟ್ ದುರಸ್ತಿಗೆ ಸಂಬಂಧಿಸಿದಂತೆ ನಿವೃತ್ತ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಮಾರ್ಗದರ್ಶನದಲ್ಲಿ ಸುಮಾರು 108 ಜನ ಹಗಲು ರಾತ್ರಿ ಅಧಿಕಾರಿಕಾರಿಗಳು, ಕಾರ್ಮಿಕ ವರ್ಗ ಕೆಲಸ ಮಾಡಿದ್ದಾರೆ. ಇವರಿಗೆ ಗೌರವ ಸಲ್ಲಿಸಿ ಪ್ರಶಸ್ತಿ ಪತ್ರ ನೀಡಬೇಕು ಎಂದು ಸರಕಾರ ನಿರ್ಧರಿಸಿದೆ ಎಂದರು.
ತುಂಗಭದ್ರಾ ಕ್ರಸ್ಟ್ ಗೇಟ್ ಅವಘಡ ಸಂಭವಿಸಿದಾಗ ಸಾಕಷ್ಟು ಜನ ನೀರನ್ನು ಹೊರಗೆ ಬಿಡಬೇಡಿ ಎಂದರು. ನಾನು ತಂತ್ರಜ್ಞರ ಬಳಿ ಚರ್ಚೆ ನಡೆಸಿ ಅಣೆಕಟ್ಟಿನ ಉಳಿವಿಗಾಗಿ ಕಠಿಣ ನಿರ್ಧಾರ ತೆಗೆದುಕೊಂಡೆ. ರೈತರು ಬೆಳೆ ಹಾಳಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರೂ ನೀರನ್ನು ಹೊರಗೆ ಬಿಡಬೇಕಾಯಿತು. ಅವಘಡ ನಡೆದ 3 ಗಂಟೆಗಳಲ್ಲಿ ಗೇಟಿನ ವಿನ್ಯಾಸವನ್ನು ಮೂರು ಎಂಜಿನಿಯರಿಂಗ್ ಸಂಸ್ಥೆಗಳಿಗೆ ನೀಡಿ ತಯಾರಿಸಲು ಸೂಚನೆ ನೀಡಿದೆವು. ಈ ಕಾರ್ಯವನ್ನು ಇಡೀ ದೇಶವೇ ಗಮನಿಸುತ್ತಿತ್ತು. ಕೇವಲ 4 ದಿನಗಳಲ್ಲಿ ನೂತನ ಗೇಟ್ ಅನ್ನು ಅಳವಡಿಸಲಾಯಿತು. ಶೇ.50 ರಷ್ಟು ನೀರು ಪೋಲಾಯಿತು ಎಂದು ಅವರು ಹೇಳಿದರು.
ಎತ್ತಿನಹೊಳೆ ಕಾರ್ಯಕ್ರಮ ಮುಗಿದ ತಕ್ಷಣ ತುಂಗಭದ್ರಕ್ಕೂ ಬಾಗಿನ ಅರ್ಪಿಸಲಾಗುವುದು. ಆ ಭಾಗದ ರೈತರ ಪ್ರಾರ್ಥನೆಗೆ ಫಲ ಸಿಕ್ಕಿದೆ. ವಿರೋಧ ಪಕ್ಷಗಳ ನಾಯಕರು ಮಾಡಿದ ಟೀಕೆಗಳನ್ನು ಮಾಧ್ಯಮಗಳು ಜನರಿಗೆ ತಿಳಿಸಬೇಕು, ಜೊತೆಗೆ ನಮ್ಮ ಕೆಲಸವನ್ನೂ ಪ್ರಚಾರ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಗೇಟ್ ತುಂಡಾದ ಅವಘಡ ಸಂಭವಿಸಿದ ಮೇಲೆ ಸೆಕ್ಷನ್ 38, 39 ಅಣೆಕಟ್ಟು ಸಂರಕ್ಷಣಾ ಕಾಯ್ದೆ ಪ್ರಕಾರ, ನೂತನವಾಗಿ ಸಂರಕ್ಷಣಾ ಪರಿಶೀಲನಾ ಸಮಿತಿಯನ್ನು ಸಿಡಬ್ಲ್ಯೂಸಿ ಮಾಜಿ ಅಧ್ಯಕ್ಷರಾಗಿದ್ದ ಎ.ಕೆ.ಬಜಾಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಈಗಾಗಲೇ ಸಮಿತಿ ಕೆಲಸ ಮಾಡುತ್ತಿದೆ. ತುಂಗಭದ್ರಾ ಗೇಟುಗಳ ವಿಚಾರವಾಗಿ ಸಭೆ ನಡೆಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕಬಿನಿ ಅಣೆಕಟ್ಟು ಕೂಡ ಅಪಾಯದಲ್ಲಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿದ್ದವು. ಆ ನಂತರ ಈ ಸಮಿತಿ ಅಲ್ಲಿಗೂ ತೆರಳಿ ನೀರಿನ ಆಳಕ್ಕೆ ಇಳಿದು ಪರಿಶೀಲನೆ ನಡೆಸಿದೆ. ನನ್ನ ಸೂಚನೆಗಳನ್ನು ಕಾಯಬೇಡಿ, ಯಾವುದಾದರೂ ತೊಂದರೆ ಇದ್ದರೆ ಕೂಡಲೇ ಕಾರ್ಯಪ್ರವೃತ್ತರಾಗಿ ಎಂದು ಸೂಚಿಸಿದ್ದೇನೆ. ಈ ಸಮಿತಿ ವರದಿ ನೀಡುವ ತನಕ ಇದರ ಬಗ್ಗೆ ನಾನು ಮಾಹಿತಿ ನೀಡಲು ಆಗುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.