ಬೆಂಗಳೂರು : ಆರು ದಿನಗಳಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿಗಳ ನೌಕಕರು ಹೂಡಿದ್ದ ಮುಷ್ಕರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೆಗೆದುಕೊಂಡ ನಿರ್ಧಾರಗಳಿಂದ ಅಂತ್ಯ ಕಂಡಿದೆ. ಅಲ್ಲದೆ, ಎಂದಿನಂತೆ ಕಚೇರಿ ಕಾರ್ಯಗಳಲ್ಲಿ ನಿರತರಾಗುವುದಾಗಿ ನೌಕರ ಸಂಘದ ಪ್ರತಿನಿಧಿಗಳು ಘೋಷಿಸಿದ್ದಾರೆ.
ಗುರುವಾರ ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ನಿಯೋಗ ವಿಕಾಸಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ಪಾಲ್ಗೊಂಡು ತಮ್ಮ ಬೇಡಿಕೆಗಳನ್ನು ಸಚಿವರ ಮುಂದಿರಿಸಿದರು. ಸುಮಾರು 75ಕ್ಕೂ ಹೆಚ್ಚು ಬೇಡಿಕೆಗಳನ್ನು ಆಲಿಸಿದ ಪ್ರಿಯಾಂಕ್ ಖರ್ಗೆ, ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಾಗಬಹುದಾದ ಎಲ್ಲ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಆದ್ಯತೆಯ ಮೇಲೆ ಈಡೇರಿಸುವುದಾಗಿ ತಿಳಿಸಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಭಡ್ತಿ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ನೌಕರರ ಸಂಘದ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸುವುದಾಗಿ ಪ್ರಕಟಿಸಿದ ಅವರು, ಮೂರು ತಿಂಗಳ ಕಾಲಮಿತಿಯೊಳಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು.
ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ತಮ್ಮ ಹಿತಾಸಕ್ತಿಗಳಿಗಾಗಿ ಹೋರಾಟ ಮಾಡುವುದು ಎಷ್ಟು ಮುಖ್ಯವೋ, ಸಾರ್ವಜನಿಕ ಸೇವೆಯ ಮೂಲಕ ಗ್ರಾಮೀಣ ಜನರ ಹಿತಾಸಕ್ತಿಗಳನ್ನು ಕಾಪಾಡಲು ಅಷ್ಟೇ ಬದ್ಧತೆಯನ್ನು ಹೊಂದಿರಬೇಕಾಗುತ್ತದೆ ಎಂಬ ಕಿವಿಮಾತನ್ನೂ ಪ್ರಿಯಾಂಕ್ ಖರ್ಗೆ ಈ ಸಂದರ್ಭದಲ್ಲಿ ಹೇಳಿದರು.
ತಾವು ಸಚಿವರಾಗಿ ಇಲಾಖೆಯ ನೌಕರರ ಹಿತ ಕಾಪಾಡಲು ಸಿದ್ಧರಾಗಿರುವುದಾಗಿ ಹೇಳಿದ ಪ್ರಿಯಾಂಕ್ ಖರ್ಗೆ, ಮುಷ್ಕರ ಹೂಡುವುದಕ್ಕಿಂತಲೂ ಹೆಚ್ಚಾಗಿ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಯಾವುದೇ ಸಮಯದಲ್ಲಾಗಲಿ ನೇರವಾಗಿ ಬಂದು ತಮ್ಮನ್ನು ಕಾಣುವಂತೆ ನೌಕರ ವೃಂದಕ್ಕೆ ತಿಳಿಸಿದರು. ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಅಂಜುಮ್ ಪರ್ವೇಝ್ ಹಾಗೂ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಹಾಜರಿದ್ದರು.