ಬೆಂಗಳೂರು, ನ.5: ತನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ಎಡಿಜಿಪಿ ಎಂಚಂದ್ರಶೇಖರ್ ನೀಡಿರುವ ದೂರಿನ ಆಧಾರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಎಚ್.ಡಿ.ಕುಮಾರಸ್ವಾಮಿ, ಅವರ ಪುತ್ರ ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಆಪ್ತನಾಗಿರುವ ಜೆಡಿಎಸ್ ಮುಖಂಡ ಸುರೇಶ್ ಬಾಬು ವಿರುದ್ಧ ಬಿ.ಎನ್.ಎಸ್. ಅಂಡರ್ ಸೆಕ್ಷನ್ 224ರ ಅಡಿಯಲ್ಲಿ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಏನಿದೆ ಎಫ್.ಐ.ಆರ್.ನಲ್ಲಿ?
“ನಾನು ಐ.ಎಸ್.ಡಿ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಎಸ್.ಐ.ಟಿ.ಯಲಿ ಐಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಚ್.ಡಿ. ಕುಮಾರಸ್ವಾಮಿ ಮೇಲೆ ಮೊ.ಸ: 16/2014ರಲ್ಲಿ ತನಿಖೆ ಕೈಗೊಂಡಿದ್ದು, ಈ ವೇಳೆ ಅವರ ವಿರುದ್ಧ ಹಚ್ಚವರಿ ಸಾಕ್ಷ್ಯಾಧಾರಗಳು ದೊರೆತಿದ್ದರಿಂದ, ಕಾನೂನು ಕ್ರಮ ಕೈಗೊಳ್ಳಲು ಕರ್ನಾಟಕ ರಾಜಪಾಲರ ಅನುಮತಿ ಕೋರಿದ್ದೆ. ಇದೇ ಕಾರಣಕ್ಕೆ ಎಚ್.ಡಿ.ಕುಮಾರಸ್ವಾಮಿ ಕಳೆದ ಸೆಪ್ಟಂಬರ್ 28 ಮತ್ತು 29ರಂದು ಸುದ್ದಿಗೋಷ್ಠಿಗಳನ್ನು ನಡೆಸಿ ನನ್ನ ಬಗ್ಗೆ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಲ್ಲದೆ, ಬೆದರಿಕೆ ಹಾಕಿದ್ದಾರೆ. ನನ್ನನ್ನು ಕರ್ನಾಟಕ ರಾಜ್ಯ ಕೇಡರ್ ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಮೌಕಿಕವಾಗಿ ಬೆದರಿಕೆ ಹಾಕಿದ್ದಾರೆ. ನನ್ನ ಕುಟುಬುದವರ ವಿರುದ್ಧವೂ ಸಹ ಸುಳ್ಳು ಆಪಾದನೆಗಳನ್ನು ಮಾಡಿ ಅವರಿಗ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಎಡಿಜಿಪಿ ಚಂದ್ರಶೇಖರ್ ಅವರ ದೂರನ್ನು ಆಧರಿಸಿ ಎಫ್.ಐ.ಆರ್.ನಲ್ಲಿ ಉಲ್ಲೇಖಿಸಲಾಗಿದೆ.
”ಅಲ್ಲದೆ, ನಾನು ಬೌರಿಂಗ್ ಆಸ್ಪತ್ರೆಯಿಂದ ಸುಳ್ಳು ಮೆಡಿಕಲ್ ದಾಖಲಾತಿಗಳನ್ನು ಪಡೆದು ಕರ್ನಾಟಕ ಕೇಡರ್ ನಲಿ. ಮುಂದುವರಿಯುತ್ತಿರುವುದಾಗಿ ಸುಳ್ಳು ಆರೋಪ ಮಾಡಿದ್ದಾರೆ ಹಾಗೂ ನಾನು ಲಂಚ ತೆಗೆದುಕೊಂಡಿರುವುದಾಗಿಯೂ ಕುಮಾರಸ್ವಾಮಿ ಸುಳ್ಳು ಆರೋಪ ಮಾಡಿದ್ದಾರೆ” ಎಂದು ಎಫ್.ಐ.ಆರ್.ನಲ್ಲಿದೆ.
“ಸೆಪ್ಟಂಬರ್ 29ರಂದು ಎಚ್,ಡಿ.ಕುಮಾರಸ್ವಾಮಿಯವರ ಮಗನಾದ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ನನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ನಂತರ ಎಚ್.ಡಿ.ಕುಮಾರಸ್ವಾಮಿಯವರ ಆಪ್ತರಾದ ಸುರೇಶ್ ಬಾಬು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ, ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ್ದಾರೆ” ಎಂದು ಚಂದ್ರಶೇಖರ್ ಅವರ ದೂರನ್ನು ಆಧರಿಸಿ ಎಫ್.ಐ.ಆರ್. ನಲ್ಲಿ ಉಲ್ಲೇಖಿಸಲಾಗಿದೆ.
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿ ಕೇಂದ್ರ ಸಚಿವರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಲಾಗಿತ್ತು. ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು 42ನೇ ಎಸಿಎಂಎಂ ನ್ಯಾಯಾಲಯದ ಅನುಮತಿ ನೀಡಿದೆ. ಅದರಂತೆ ಸಂಜಯ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಫ್.ಐ.ಆರ್.ನಲ್ಲಿ ಕುಮಾರಸ್ವಾಮಿ ಎ1, ನಿಖಿಲ್ ಎ2 ಹಾಗೂ ಸುರೇಶ್ ಬಾಬು ಎ3 ಆರೋಪಿ ಎಂದು ಉಲ್ಲೇಖಿಸಲಾಗಿದೆ.