ಬೆಂಗಳೂರು : ವಿಶೇಷ ಪೊಲೀಸ್ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ.ಚಂದ್ರಶೇಖರ್ ಅವರ ದೂರು ಆಧರಿಸಿ ಬೆಂಗಳೂರಿನ ಸಂಜಯ್‌ನಗರ ಠಾಣೆಯ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದು(ನ.6) ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡುವುದರ ಜೊತೆಗೆ ಬೆದರಿಕೆ ಹಾಕಲಾಗಿದೆ ಎಂದು ಚಂದ್ರಶೇಖರ್ ಅವರು ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಿಸಿದ್ದರು.
ಕೇಂದ್ರ ಸಚಿವ ಕುಮಾರಸ್ವಾಮಿ, ಅವರ ಪುತ್ರ ಹಾಗೂ ಹಾಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಎಫ್‌ಐಆರ್ ರದ್ದತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಮುಂದೆ ವಿಚಾರಣೆಗೆ ಇನ್ನಷ್ಟೇ ದಿನಾಂಕ ನಿಗದಿಯಾಗಬೇಕಿದೆ.