EBM News Kannada
Leading News Portal in Kannada

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಂಶೋಧನೆ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

0


ಬೆಳಗಾವಿ (ಸುವರ್ಣ ವಿಧಾನಸೌಧ) : ರಾಜ್ಯದಲ್ಲಿನ ಅಡಿಕೆ ಬೆಳೆಗೆ ತಗುಲಿರುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಅಗತ್ಯ ಸಂಶೋಧನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಭೀಮಣ್ಣ ಟಿ.ನಾಯಕ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈಗಾಗಲೇ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಂಶೋಧನೆ ಕ್ರಮ ವಹಿಸಲಾಗಿದೆ. ಅಲ್ಲದೆ, ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ನೀಡಲು ಕೇಂದ್ರ ಸರಕಾರ 225 ಕೋಟಿ ರೂ.ಒದಗಿಸುವ ಭರವಸೆ ನೀಡಿದೆ. ಹೀಗಾಗಿ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಭೀಮಣ್ಣ ನಾಯಕ್, ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸೂಕ್ತ ಸಂಶೋಧನೆ ನಡೆಸಬೇಕು. ರೈತರಿಗೆ ಅಗತ್ಯ ಪರಿಹಾರ ನೀಡಬೇಕು ಎಂದರು. ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್‍ನ ರಾಜೇಗೌಡ ಹಾಗೂ ಬಿಜೆಪಿ ಸದಸ್ಯೆ ಭಾಗೀರಥಿ ಮರುಳ್ಯ, ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಸಂಬಂಧ ಸಂಶೋಧನೆಯ ಜತೆಗೆ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಈ ಕುರಿತು ಪರಿಶೀಲಿಸಲಾಗುವುದು ಎಂದು ಸಚಿವ ಮಲ್ಲಿಕಾರ್ಜುನ್ ತಿಳಿಸಿದರು.

Leave A Reply

Your email address will not be published.