ರಾಯಚೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಸಿದ ಬಗ್ಗೆ ವೀಡಿಯೋ ಕ್ಲಿಪ್ ಸಾಕ್ಷ್ಯಗಳಿದ್ದು, ಕಾನೂನು ಕ್ರಮಕ್ಕೆ ಒಳಗಾಗುತ್ತಾರೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು.
ರಾಯಚೂರಿನ ತಮ್ಮ ನಿವಾಸದಲ್ಲಿ ಭೇಟಿಯಾದ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದಾಗ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಸಿ.ಟಿ.ರವಿ ಕೆಟ್ಟದಾಗಿ ಮಾತನಾಡುವಾಗ ಲಕ್ಷ್ಮಿ ಹೆಬ್ಬಾಳ್ಕರ್ ವಿರೋಧಿಸಿದ್ದಾರೆ. ಆಗ ಸಿ.ಟಿ ರವಿ 5 ಬಾರಿ ಆಕ್ಷೇಪಾರ್ಹ ಪದ ಬಳಸಿ ನಿಂದಿಸಿದ್ದಾರೆ. ಈ ಪ್ರಕರಣವನ್ನು ಬಿಜೆಪಿಯವರು ತಿರುಚಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ವಿಜಯೇಂದ್ರ ಅವರಿಗೆ ರಾಜಕೀಯ ಅನುಭವದ ಕೊರತೆ ಇದೆ. ಅಪರಾಧವನ್ನೂ ಸಮರ್ಥಿಸಿಕೊಳ್ಳುತ್ತಿರುವುದು ವಿಷಾದನೀಯ. ಬಿಜೆಪಿ ನಾಯಕರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಮಾನಕರ ಹೇಳಿಕೆ ನೀಡಿದ್ದು, ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.