EBM News Kannada
Leading News Portal in Kannada

ಯಲ್ಲಾಪುರ, ಸಿಂಧನೂರು ಬಳಿ ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

0


ಹೊಸದಿಲ್ಲಿ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಘಟನೆ ಬಗ್ಗೆ ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ ಸಂಭವಿಸಿರುವುದು ತೀವ್ರ ದುಃಖ ತಂದಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಮೃತರ ಕುಟುಂಬಸ್ಥರಿಗೆ PMNRF ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000 ರೂ. ನೀಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಉತ್ತರ ಕನ್ನಡದ ಯಲ್ಲಾಪುರದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಮೂಲ್ಯ ಜೀವಗಳು ಬಲಿಯಾಗಿದ್ದು, ಘಟನೆಯಿಂದ ಬಹಳ ದುಃಖವಾಗಿದೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು, ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ಸಮೀಪ ಬುಧವಾರ ನಸುಕಿನ ವೇಳೆ ತರಕಾರಿ ತುಂಬಿದ್ದ ಲಾರಿ ಉರುಳಿಬಿದ್ದ ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ. ಎಂಟಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಕಳೆದ ರಾತ್ರಿ ಕ್ರೂಸರ್ ವಾಹನವೊಂದು ಟೈರ್ ಸ್ಫೋಟಗೊಂಡು ಉರುಳಿಬಿದ್ದ ಪರಿಣಾಮ ಮಂತ್ರಾಲಯದ ಗುರು ಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಹತ್ತು ಮಂದಿ ಗಾಯಗೊಂಡಿದ್ದಾರೆ.



Leave A Reply

Your email address will not be published.