EBM News Kannada
Leading News Portal in Kannada

ಬೆಂಗಳೂರಿನಲ್ಲಿ 25 ಎಕರೆಯಲ್ಲಿ ವಿಜ್ಞಾನ ನಗರ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

0


ಬೆಂಗಳೂರು : ಬೆಂಗಳೂರು ನಗರದಲ್ಲಿ ವಿಜ್ಞಾನ ನಗರ ಸ್ಥಾಪನೆಗೆ ಹಂಚಿಕೆ ಮಾಡಲಾದ 25 ಎಕರೆ ಭೂಮಿಯನ್ನು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಗೆ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಪ್ರಗತಿ ಪರೀಶಿಲನಾ ಸಭೆ ನಡೆಸಿದ ಅವರು, ಬೆಂಗಳೂರಿನಲ್ಲಿ ಒಂದು ತಿಂಗಳ ಕಾಲ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಉತ್ಸವ ಆಯೋಜನೆ ಮಾಡುವಂತೆ ತಿಳಿಸಿದರು.

ಡಾ.ಎಚ್.ನರಸಿಂಹಯ್ಯ ಅಂತರ್‍ರಾಷ್ಟ್ರೀಯ ವಿಜ್ಞಾನ ಕೇಂದ್ರದ ಸ್ಥಾಪನೆಗೆ ಈಗಾಗಲೇ 132 ಎಕರೆ ಜಾಗ ಹಂಚಿಕೆಯಾಗಿದ್ದು, ಆ ಜಾಗವನ್ನು ಆದಷ್ಟು ಬೇಗನೆ ಇಲಾಖೆಯ ಸುಪರ್ದಿಗೆ ಪಡೆಯಲು ಕ್ರಮ ಕೈಗೊಳ್ಳಬೇಕು. ರಾಮನಗರದಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಜಮೀನು ಪಡೆಯಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ಬೆಂಗಳೂರಿನಲ್ಲಿ ಕ್ವಾಂಟಮ್ ಸಮ್ಮೇಳನ ಆಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಕಾಶ ಕಾಯಗಳ ಬಗ್ಗೆ ಆಸಕ್ತಿ ಮೂಡಿಸಲು 833 ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದೂರದರ್ಶಕ ಒದಗಿಸಲಾಗುವುದು. ಪ್ರಸಕ್ತ ವರ್ಷ ರಾಜ್ಯದಲ್ಲಿ ಒಟ್ಟು 9 ತಾರಾಲಯಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, 5 ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave A Reply

Your email address will not be published.