ಸಿಜೆಐ ಆಯ್ಕೆ ಸಂಬಂಧ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ: ರವಿಶಂಕರ್ ಪ್ರಸಾದ್
ನವದೆಹಲಿ: ಮುಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಆಯ್ಕೆ ಮಾಡುವುದನ್ನು ಯಾರೂ ಪ್ರಶ್ನೆ ಮಾಡಬಾರದು ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಮುಂದಿನ ಬಾರಿಗೆ ಈಗಿರುವ ಅತೀ ಹಿರಿಯ ನ್ಯಾಯಮೂರ್ತಿಯನ್ನು ಮುಖ್ಯ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗುತ್ತದೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಅಕ್ಟೋಬರ್ 2ರಂದು ಸಿಜೆಐ ದೀಪಕ್ ಮಿಶ್ರಾ ಅವರು ಸೇವೆಯಿಂದ ನಿವೃತ್ತಿ ಪಡೆಯಲಿದ್ದು ಅವರ ಜಾಗಕ್ಕೆ ರಂಜನ್ ಗೊಗಾಯ್ ಅವರನ್ನು ನೇಮಕ ಮಾಡುತ್ತೀರಾ ಎಂಬ ಪ್ರಶ್ನೆಗೆ ಈಗಿರುವ ಮುಖ್ಯ ನ್ಯಾಯಮೂರ್ತಿಗಳು ಅತೀ ಹಿರಿಯ ನ್ಯಾಯಾಧೀಶರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸ್ಸು ಮಾಡಲಿದ್ದಾರೆ ಎಂದರು.
ನಮಗೆ ಹೆಸರುಗಳು ಬಂದ ಮೇಲೆ ನಾವು ಅದರ ಬಗ್ಗೆ ಚರ್ಚೆ ನಡೆಸುತ್ತೇವೆ. ಇನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳು ತಂಬಿದ್ದು ಈ ಅವಧಿಯಲ್ಲಿ ಕಾನೂನು ಸಚಿವಾಲಯದ ಸಾಧನೆಗಳನ್ನು ವಿವರಿಸಿದರು.
ಇನ್ನು ಸಿಜೆಐ ಅವರ ಕಾರ್ಯವೈಖರಿ ವಿರುದ್ಧ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಾದ ಜೆ. ಚಲಮೇಶ್ವರ್, ರಂಜನ್ ಗೊಗಾಯ್, ಮದನ್ ಬಿ ಲೋಕೂರ್ ಹಾಗೂ ಕುರಿಯನ್ ಜೋಸೆಫ್ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು ಇದು ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಅವರ ಬಳಿಕ ಯಾರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಕವಾಗುತ್ತಾರೆ ಎಂಬುದು ಕೂಡ ಚರ್ಚೆಗೆ ಗ್ರಾಸವಾಗಿದೆ.