ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಸಿಎಂ ರಾಜ್ಯಕ್ಕೆ ವಕ್ಕರಿಸಿದ್ದಾರೆ: ಹೆಚ್ಡಿ ಕುಮಾರಸ್ವಾಮಿ – Kannada News | Former CM HD Kumaraswamy Slams CM Siddaramaiah by tweet
ಕೃಷಿ ಇಲಾಖೆಯ ಅಧಿಕಾರಿಗಳು ಸಚಿವ ಚಲುವನಾರಾಯಣ ಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವುದನ್ನು ಅಸ್ತ್ರವಾಗಿಸಿಕೊಂಡು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ (Congress) ಸರ್ಕಾರ ರಚನೆಯಾದಾಗಿನಿಂದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು (HD Kumaraswamy) ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದಾರೆ. ಅಧಿಕಾರಿಗಳ ವರ್ಗಾವಣೆ ಮತ್ತು ನೈಸ್ ಹಗರಣದ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತಿವಿಯುತ್ತಿದ್ದಾರೆ. ಇದೀಗ ಕೃಷಿ ಇಲಾಖೆಯ ಅಧಿಕಾರಿಗಳು ಸಚಿವ ಚಲುವನಾರಾಯಣ ಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವುದನ್ನು ಅಸ್ತ್ರವಾಗಿಸಿಕೊಂಡು ಸರಣಿ ಟ್ವೀಟ್ ಮಾಡುವ ಮೂಲಕ ಹರಿಹಾಯ್ದಿದ್ದಾರೆ. “ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ” ಎಂದು ವಾಗ್ದಾಳಿ ಮಾಡಿದ್ದಾರೆ.
“ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5#YstTax #CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023
“ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು” ಎಂದರು.
“ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ?” ಎಂದು ಪ್ರಶ್ನಿಸಿದ್ದಾರೆ.
“ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್’ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ??” ಎಂದು ಕಾಲೆಳೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 8:21 am, Tue, 8 August 23